Monday, December 23, 2024

ಎ.3ರಂದು ಕಾಂಗ್ರೆಸ್  ಅಭ್ಯರ್ಥಿ ಪದ್ಮರಾಜ್ ನಾಮಪತ್ರ ಸಲ್ಲಿಕೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

by eesamachara
0 comment

ಮಂಗಳೂರು: ದ.ಕ. ಜಿಲ್ಲಾ ಲೋಕಸಭಾ ಕಾಂಗ್ರೆಸ್  ಅಭ್ಯರ್ಥಿ  ಪದ್ಮರಾಜ್ ಅವರು  ಎ.3ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ದಿನದಂದು ಮಂಗಳೂರು ಪುರಭವದಲ್ಲಿ ಸಮಾವೇಶ ನಡೆದು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಗುವುದು.  ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ ಎಂದ ಅವರು, ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪುತ್ತೂರಿಗೆ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಪ್ರಚಾರ ನಡೆಸಲಿದ್ದಾರೆ ಎಂದರು.

ಎಲ್ಲಾ ಬ್ಲಾಕ್ ಗಳಲ್ಲಿ ಮಾ.27ರಿಂದ 30ರ ವರೆಗೆ ಬ್ಲಾಕ್, ವಿಧಾನಸಭಾ ಕ್ಷೇತ್ರಗಳ ಸಭೆ ನಡೆಯಲಿದೆ. ಎ.11ರಂದು ಸುಳ್ಯ,   ಎ.12 ರಂದು ಮುಲ್ಕಿ, ಎ.13 ರಂದು ಪುತ್ತೂರು, ಎ.14ರಂದು ಮಂಗಳೂರು ದಕ್ಷಿಣ, ಎ.15ರಂದು ಉಳ್ಳಾಲ, ಎ.16ರಂದು ಮಂಗಳೂರು ಉತ್ತರ, ಎ.17ರಂದು ಬೆಳ್ತಂಗಡಿ ಹಾಗೂ ಎ.18ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಉಸ್ತುವಾರಿಯನ್ನಾಗಿ ಪಕ್ಷದ ವರಿಷ್ಠರು ಮಾಜಿ ಸಚಿವ ರಮಾನಾಥ ರೈ ಅವರನ್ನು ನೇಮಕ ಮಾಡಿದ್ದು, ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಚಾರ ಸಭೆ ಹಾಗೂ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್  ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.

ಪಕ್ಷದ ಕೆಲಸ ಮಾಡಲು ಅವಕಾಶ ನೀಡಿದ್ದಾರೆ. ವಿದ್ಯಾರ್ಥಿ ಕಾಂಗ್ರೆಸ್ ನಿಂದ ಬೆಳೆದಿರುವ ತನಗೆ ಆರು ಜಿಲ್ಲೆಗಳ ಹೊಸ ಜವಾಬ್ದಾರಿ ನೀಡಿದ್ದಾರೆ ಎಂದು ತನ್ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ನೇಮಕ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದರು.

ಜಿಲ್ಲಾ ಪ್ರಚಾರ ಸಮಿತಿ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ‌ ಎಂದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ.ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios