Monday, December 23, 2024

ದಕ್ಷಿಣ ಕನ್ನಡ ಜಿಲ್ಲೆ: ಬಿಜೆಪಿಯಿಂದ ಕ್ಯಾಪ್ಟನ್ ಬೃಜೇಶ್ ಚೌಟ ಕಣಕ್ಕೆ

by eesamachara
0 comment

ಮಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ ರಾಜ್ಯದ 20 ಕ್ಷೇತ್ರಗಳಿಗೆ ಸೇರಿದಂತೆ 72 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ನಿವೃತ್ತ ಸೇನಾಧಿಕಾರಿ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬೃಜೇಶ್ ಚೌಟ ಅವರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ.

ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಮಿಲಾಗ್ರಿಸ್ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಚೌಟ ಬಳಿಕ ಮಧ್ಯಪ್ರದೇಶದ ಇಂದೋರ್ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.

ಬಾಲ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿ ಸಂಘದ ಪ್ರೇರಣೆಯಿಂದ ಮುಂದೆ ಭಾರತೀಯ ಸೇನೆಗೆ ಸೇರಿದ್ದ ಚೌಟರು ಸೇನಾ ನಿವೃತ್ತಿಯ ಬಳಿಕ ಮಂಗಳೂರಿಗೆ ಆಗಮಿಸಿ ಆರೆಸ್ಸೆಸ್ ನ ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡು 2013ರಲ್ಲಿ ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಕ್ರಿಯ ರಾಜಕೀಯಕ್ಕಿಳಿದಿದ್ದರು.‌ 2016-19ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡು ಸಂಸದ ನಳಿನ್ ಕುಮಾರ್ ಜತೆಗೂಡಿ ಪಕ್ಷದ ಕೆಲಸ ಮಾಡಿದ್ದರು. 2019ರಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿದ್ದ ಚೌಟ, 2023ರ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದ ಪ್ರಭಾರಿಯಾಗಿದ್ದರು. ಇದಲ್ಲದೆ, 2015ರಿಂದ ಕೇರಳ, ಕರ್ನಾಟಕ, ದೆಹಲಿ, ಮಹಾರಾಷ್ಟ್ರದ ಅಸೆಂಬ್ಲಿ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಕರ್ತವ್ಯ ನಿರ್ವಹಿಸಿದ್ದರು. ರಾಜ್ಯ ಬಿಜೆಪಿಯ ಚುನಾವಣಾ ಸಮಿತಿ ಭಾಗವಾಗಿರುವ ಯುವ ಸಂವಾದ ಘಟಕದಲ್ಲಿ ರಾಜ್ಯ ಸಹ ಸಂಚಾಲಕರಾಗಿ ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವಿ ಸೂರ್ಯ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಮಲೈ ಅವರ ಜೊತೆ ರಾಜ್ಯಾದ್ಯಂತ ಪ್ರವಾಸ ಮಾಡಿದ್ದಾರೆ.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios