ಬೆಂಗಳೂರು: ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್)ನ 50ನೇ ವರ್ಷಾಚರಣೆ ಪ್ರಯುಕ್ತ ಗೋಲ್ಡನ್ ಫಿಫ್ಟಿ ಮಹಾಸಮ್ಮೇಳನ ಹಾಗೂ ಎಸ್ಸೆಸ್ಸೆಫ್ ರಾಷ್ಟ್ರೀಯ ಸಮಿತಿಯು ನಡೆಸುತ್ತಿರುವ ಕಾಶ್ಮೀರದಿಂದ ಆರಂಭವಾಗಿರುವ ಸಂವಿಧಾನ ಯಾತ್ರೆಯ ಸಮಾರೋಪ ಸಮಾರಂಭ ನಾಳೆ (ಸೆ.10) ಬೆಂಗಳೂರಿನ ಶ್ರೀ ಕೃಷ್ಣ ವಿಹಾರ್ ಅರಮನೆ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕರ್ನಾಟಕ ಉಲಮಾ ಒಕ್ಕೂಟದ ಅಧ್ಯಕ್ಷ ಝೈನುಲ್ ಉಲಮಾ ಮಾಣಿ ಉಸ್ತಾದ್ ಅಧ್ಯಕ್ಷತೆ ವಹಿಸಲಿದ್ದಾರೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಮುಖ್ಯ ಭಾಷಣ ಮಾಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ಅಲ್ ಬುಖಾರಿ ಕೂರತ್, ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ವಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಬಿ.ಝಡ್ ಝಮೀರ್ ಅಹ್ಮದ್ ಖಾನ್, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ, ತಮಿಳುನಾಡು ಸಚಿವ ಗಿಂಗಿ ಮಸ್ತಾನ್, ಸಂಸದ ಟಿ.ಎನ್. ಪ್ರತಾಪನ್ ತ್ರಿಶೂರ್ ಸೇರಿದಂತೆ ಮತ್ತಿತರು ಭಾಗವಹಿಸಲಿದ್ದಾರೆ.
ಬೆಳಗ್ಗೆ 10ಕ್ಕೆ ಶೃಂಗಾರ್ ಪ್ಯಾಲೇಸ್ ಸಭಾಂಗಣದಲ್ಲಿ ಪ್ರತಿನಿಧಿ ಸಮಾವೇಶ ನಡೆಯಲಿದ್ದು, ಸುಮಾರು 7 ಸಾವಿರ ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.