ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ( ಮಾ.22) ಕಾಂಗ್ರೆಸ್ ನ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಂಡ್ಯದ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
‘ಈ ವರ್ಷ ರಾಜ್ಯದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದೇನೆ’ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕಕ್ಕೆ ಭೇಟಿ ನೀಡಿ ದೆಹಲಿಗೆ ವಾಪಸ್ ಆದ ಮೇಲೆ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಅದರಂತೆ ನಾಳೆ ಅಂದರೆ ಯುಗಾದಿ ದಿನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.