ದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ವಿವಾದಿತ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೊಳಿಸಲು ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
2019ರಲ್ಲಿ ಅಂಗೀಕಾರಗೊಂಡಿದ್ದ ಈ ಕಾನೂನಿಗೆ ರಾಷ್ಟ್ರಪತಿಗಳ ಅಂಕಿತವೂ ಬಿದ್ದಿದೆ. ಆದರೆ ದೇಶದಾದ್ಯಂತ ತೀವ್ರ ಪ್ರತಿಭಟನೆಗಳು ನಡೆದ ಕಾರಣ ಜಾರಿಗೆ ಅಧಿಸೂಚನೆ ಹೊರಡಿಸಿರಲಿಲ್ಲ. ಬಿಜೆಪಿಯೇತರ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದಿತ್ತು. ಪ್ರತಿಭಟನೆಯಲ್ಲಿ ಕನಿಷ್ಠ 100 ಮಂದಿ ಪ್ರಾಣ ಕಳೆದುಕೊಂಡಿದ್ದರು.
ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಹೇಳಿದ್ದರು. ಅದರಂತೆ ಇದೀಗ ಲೋಕಸಭಾ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಗೃಹ ಸಚಿವಾಲಯ ಸಿಎಎ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.
ಈ ಕಾನೂನಿನಂತೆ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ಡಿಸೆಂಬರ್ 31, 2014ಕ್ಕಿಂತ ಮುಂಚೆ ಭಾರತಕ್ಕೆ ವಲಸೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಹಿಂದೂ ಸಿಖ್, ಜೈನ, ಕ್ರೈಸ್ತ ಬೌದ್ಧ ಮತ್ತು ಪಾರ್ಸಿ ಸಮುದಾಯದ ಮಂದಿಗೆ ಭಾರತದ ಪೌರತ್ವ ನೀಡಬಹುದಾಗಿದೆ.