ಬೆಂಗಳೂರು: ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.
ಚೈತ್ರಾ ಬಿ.ಗೌಡ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಚೈತ್ರಾ ಬಿ.ಗೌಡ ತನ್ನ ಕುಟುಂಬದೊಂದಿಗೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಅಣ್ಣಯ್ಯ ಲೇಔಟ್ನಲ್ಲಿ ವಾಸವಾಗಿದ್ದರು. ವೃತ್ತಿಯಲ್ಲಿ ಹೈಕೋರ್ಟ್ ವಕೀಲೆಯಾಗಿದ್ದ ಇವರು ಪ್ರವೃತ್ತಿಯಲ್ಲಿ ಮಾಡೆಲ್ ಆಗಿ ಗುರುತಿಸಿಕೊಂಡಿದ್ದರು. ಮಹಿಳೆಯ ಪತಿ ಶಿವಕುಮಾರ್ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದಲ್ಲಿ (ಕೆಐಡಿಬಿ) ಅಸಿಸ್ಟಂಟ್ ಕಮಿಷನರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮಹಿಳೆ ಡಿಪ್ರೆಷನ್ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿದೆ ಎನ್ನಲಾಗಿದೆ.
ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನಿಖೆ ಮುಂದುವರಿದಿದೆ.