ಮಂಗಳೂರು: ಕೆಎಸ್‍ಡಿಎಲ್ ಟೆಂಡರ್ ಲಂಚ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು, ಭ್ರಷ್ಟಚಾರ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾ.9ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.
ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, “ಇಂತಹ ಭ್ರಷ್ಟ ಸರ್ಕಾರವನ್ನು ನೋಡಿಯೇ ಇಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಮೀರಿಸುವಷ್ಟು ಸುಳ್ಳು ಹೇಳುತ್ತಿದ್ದಾರೆ. ಬಿಜೆಪಿಯವರು ಸುಳ್ಳಿನ ಫ್ಯಾಕ್ಟರಿಯನ್ನೇ ಸ್ಥಾಪನೆ ಮಾಡಿಕೊಂಡಿದ್ದಾರೆ. ಪ್ರತಿ ಬಾರಿಯೂ ಬೊಮ್ಮಾಯಿ, ಹಿಂದೆಯೂ ಭ್ರಷ್ಟಚಾರ ನಡೆದಿದೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇಷ್ಟು ದಿನ ಅಧಿಕಾರದಲ್ಲಿದ್ದಾಗ ಬಿಜೆಪಿಯವರು ಏನು ಮಾಡುತ್ತಿದ್ದರು, ಭ್ರಷ್ಟಚಾರ ನಡೆದಿದ್ದರೆ ಅದನ್ನು ತನಿಖೆ ನಡೆಸಬಹುದಿತ್ತಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.
“ಭ್ರಷ್ಟಚಾರಕ್ಕೆ ದಾಖಲೆ ಕೊಡಿ ಎಂದು ಮುಖ್ಯಮಂತ್ರಿ ಈವರೆಗೂ ಕೇಳುತ್ತಿದ್ದರು. ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ, ನಡೆಸಿರುವುದು ಎಂಟು ಕೋಟಿ ರೂಪಾಯಿಗೂ ಅಧಿಕ ಮೊತ್ತ ವಶ ಪಡಿಸಿಕೊಂಡಿರುವುದು, ಪ್ರಶಾಂತ್‍ನನ್ನು ಬಂಧಿಸಿರುವುದು ಕಣ್ಣೇದುರೇ ಇದೆ. ಭ್ರಷ್ಟಚಾರಕ್ಕೆ ಇದಕ್ಕಿಂತಾ ಸಾಕ್ಷ್ಯ ಬೇಕಾ? ಪಿಎಎಸ್‍ಐ ಹಗರಣದಲ್ಲಿ ರಾಜ್ಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರೇ ಜೈಲು ಸೇರಿದ್ದಾರೆ. ಮತ್ತೊಂದು ಹಗರಣದಲ್ಲಿ ಜಿಲ್ಲಾಧಿಕಾರಿ ಜೈಲು ಸೇರಿದ್ದಾರೆ. ಆದರೂ ಮುಖ್ಯಮಂತ್ರಿ ಭ್ರಷ್ಟಚಾರಕ್ಕೆ ಸಾಕ್ಷಿ ಕೇಳುತ್ತಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮಾನ ಮರ್ಯಾದೆ ಇದ್ದರೆ ತಕ್ಷಣವೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಮಾ.9 ರಂದು ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ.