ದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಮಂಗಳವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಇಂಡಿಯಾ ಬ್ಲಾಕ್‌ನ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಒಮ್ಮತದ ಆಗ್ರಹ ಕೇಳಿಬಂದಿತ್ತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದರು.