ನವದೆಹಲಿ: “ಕರ್ನಾಟಕ ಸಿಎಂ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ತೀರ್ಮಾನ ಆಗಿಲ್ಲ” ಎಂದು ಕರ್ನಾಟಕ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕಾಂಗ ಪಕ್ಷದ ನಾಯಕರು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ. ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ” ಎಂದು ಹೇಳಿದರು.
“ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಇನ್ನು 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ” ಎಂದು ತಿಳಿಸಿದರು.