ಬೆಂಗಳೂರು: ನಂದಿನಿ ಹಾಲಿನ ಪ್ಯಾಕೆಟ್‌ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್. ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2 ರೂ. ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ನಂದಿನಿ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ
ದರ ಹೆಚ್ಚಳದ ಕುರಿತಾಗಿ ಪ್ರಕಟಣೆ ಹೊರಡಿಸಿರುವ ಅವರು, “ಈ ವರೆಗೆ 1,000 ಮಿ.ಲೀ ಹಾಲಿಗೆ ರೂ.42 ಹಾಗೂ 500 ಮಿ.ಲೀ ಹಾಲಿಗೆ ರೂ.22 ದರವನ್ನು ನಿಗದಿಪಡಿಸಲಾಗಿತ್ತು, ಇನ್ನು ಮುಂದೆ 1,050 ಮಿ.ಲೀ ಹಾಗೂ 550 ಮಿ.ಲೀ ಹಾಲಿನ ಪ್ಯಾಕೇಟ್ ಗಳನ್ನು ಮಾರಾಟ ಮಾಡಲಾಗುತ್ತಿದ್ದು, ಅದಕ್ಕೆ ಕ್ರಮವಾಗಿ ರೂ.44 ಹಾಗೂ ರೂ.24 ದರ ನಿಗದಿಪಡಿಸಲಾಗುತ್ತದೆ. ಇದು ನಾಡಿನ ಲಕ್ಷಾಂತರ ಹೈನುಗಾರರ ಹಿತದೃಷ್ಟಿಯಿಂದ ಕೆ.ಎಂ.ಎಫ್ ಸಂಸ್ಥೆಯು ತೆಗೆದುಕೊಂಡ ನಿರ್ಣಯವಾಗಿದ್ದು, ಹೆಚ್ಚುವರಿಯಾಗಿ ಉದ್ಪಾದನೆಯಾಗುತ್ತಿರುವ ಹಾಲನ್ನು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ತಲುಪಿಸುವ ಸದುದ್ದೇಶವನ್ನು ಕೂಡ ಇದು ಹೊಂದಿದೆ” ಎಂದಿದ್ದಾರೆ.
“ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಈ ಬಾರಿ ಹಾಲಿನ ಉತ್ಪಾದನೆ ಶೇ.15 ಹೆಚ್ಚಳವಾಗಿದೆ. ಹಿಂದಿನ ವರ್ಷಗಳಲ್ಲಿ ಈ ವೇಳೆಗೆ ನಿತ್ಯ ಸರಾಸರಿ 90 ಲಕ್ಷ ಲೀಟರ್ ಉತ್ಪಾದನೆಯಾಗುತ್ತಿದ್ದ ಹಾಲಿನ ಪ್ರಮಾಣ ಈ ಬಾರಿ ಸರಾಸರಿ 99 ಲಕ್ಷ ಲೀಟರ್ ಗೆ ಏರಿಕೆಯಾಗಿದೆ. ಹೀಗೆ ಹೆಚ್ಚುವರಿಯಾಗಿ ಉತ್ಪಾದನೆಯಾಗುವ ಹಾಲನ್ನು ರೈತರಿಂದ ಖರೀದಿ ಮಾಡಬೇಕು, ಯಾವುದೇ ಕಾರಣಕ್ಕೂ ಅವರಿಂದ ಹಾಲು ಪಡೆಯಲು ನಿರಾಕರಿಸಬಾರದು ಎಂಬ ಸದುದ್ದೇಶದಿಂದ ಈ ಹೆಚ್ಚುವರಿ ಹಾಲಿನ ಬೆಲೆ 2 ರೂಪಾಯಿಯನ್ನು ಮಾತ್ರ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆ. ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿರುವುದಿಲ್ಲ” ಎಂದು ತಿಳಿಸಿದ್ದಾರೆ.