Monday, December 23, 2024

ಪ್ರಜ್ವಲ್‌ ರೇವಣ್ಣ ಪ್ರಕರಣ ಸಿಬಿಐಗೆ ವಹಿಸುವ ಅಗತ್ಯವಿಲ್ಲ, ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ: ಸಿದ್ದರಾಮಯ್ಯ

by eesamachara
0 comment

ಮೈಸೂರು: ಪ್ರಜ್ವಲ್ ರೇವಣ್ಣನವರ ಮಹಿಳಾ ದೌರ್ಜನ್ಯ ಪ್ರಕರಣದಲ್ಲಿ ನಾನಾಗಲೀ, ಡಿ.ಕೆ.ಶಿವಕುಮಾರ್‌ ಆಗಲೀ, ಸರ್ಕಾರದ ಯಾರೊಬ್ಬರೂ ಹಸ್ತಕ್ಷೇಪ ಮಾಡುತ್ತಿಲ್ಲ. ನನಗೆ ಎಸ್.ಐ.ಟಿ. ಮೇಲೆ ವಿಶ್ವಾಸವಿದೆ. ಸತ್ಯಾಸತ್ಯತೆ ಹೊರಬರುವ ನಂಬಿಕೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ಸರ್ಕಾರ ಕಾನೂನು ರೀತ್ಯ ನಡೆಯುತ್ತಿರುವ ಕೆಲಸದಲ್ಲಿ, ತನಿಖೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಅವರು ಸರಿಯಾದ ರೀತಿಯಲ್ಲಿ ಕೆಲಸ ಮಾಡುತ್ತಾರೆಂದು ನಂಬಿದ್ದೇನೆ. ನಾನು ಯಾವತ್ತೂ ಕಾನೂನಿಗೆ ವಿರುದ್ಧವಾಗಿ ಕೆಲಸ ಮಾಡಿ ಎಂದು ಹೇಳಿಲ್ಲ, ಹೇಳುವುದೂ ಇಲ್ಲ. ಈ ಪ್ರಕರಣದಲ್ಲಿ ಅಂತರರಾಷ್ಟ್ರೀಯ ಮಟ್ಟದ ತನಿಖೆಯ ಅಗತ್ಯವಿಲ್ಲ. ಎಲ್ಲ ಅಪರಾಧ ಪ್ರಕರಣಗಳ ತನಿಖೆ ಯಾರು ಮಾಡುತ್ತಾರೆ? ನಮ್ಮ ಪೊಲೀಸರಲ್ಲವೇ? ಅವರದ್ದೇ ವಿಶೇಷ ತನಿಖಾದಳ ರಚಿಸಿರುವುದಲ್ಲವೇ? ನಮ್ಮ ಪೊಲೀಸರನ್ನು ನಾವು ನಂಬಬೇಕಲ್ಲವೆ? ಎಂದು ತಿಳಿಸಿದರು.

ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ನನಗೆ ನಮ್ಮ ಪೊಲೀಸರ ಬಗ್ಗೆ ವಿಶ್ವಾಸವಿದೆ. ಅವರು ಕಾನೂನು ರೀತ್ಯ ತನಿಖೆ ನಡೆಸಲಿದ್ದಾರೆ. ಬಿಜೆಪಿಯವರು ಯಾವತ್ತಾದರೂ ಒಂದು ಪ್ರಕರಣವಾದರೂ ಸಿಬಿಐಗೆ ಕೊಟ್ಟಿದ್ದಾರಾ? ಹಿಂದೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಡಿ.ಕೆ. ರವಿ ಪ್ರಕರಣ, ಒಂದಂಕಿ ಲಾಟರಿ ಪ್ರಕರಣ, ಸಚಿವರಾದ ಕೆ.ಜೆ. ಜಾರ್ಜ್‌ ಅವರ ಮೇಲಿನ ಆರೋಪ, ಪರೇಶ್‌ ಮೇಸ್ತಾ ಸಾವಿನ ಪ್ರಕರಣಗಳನ್ನು ಸಿಬಿಐಗೆ ವಹಿಸಲಾಗಿತ್ತು. ಹಿಂದೆ ಬಿಜೆಪಿಯವರೇ ಸಿಬಿಐಯನ್ನು ಕರಪ್ಷನ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಷನ್ ಎಂದು ಬಣ್ಣಿಸಿದ್ದಾರೆ. ದೇವೇಗೌಡರು ಚೋರ್‌ ಬಚಾವೋ ಸಂಸ್ಥೆ ಎಂದು ಹೇಳಿದ್ದರು. ಈಗ ಸಿಬಿಐ ಮೇಲೆ ಅವರಿಗೆ ವಿಶ್ವಾಸ ಬಂತಾ? ನನಗೆ ಸಿಬಿಐ ಮೇಲೆ ವಿಶ್ವಾಸವಿದೆ. ಆದರೆ, ನಮ್ಮ ಪೊಲೀಸರ ಬಗ್ಗೆ ಹೆಚ್ಚು ನಂಬಿಕೆ ಇದೆ. ಅದಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಿದ್ದೇವೆ ಎಂದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios