ಬೆಂಗಳೂರು: ಬಿಜೆಪಿ ಅಧಿಕಾರವಧಿಯಲ್ಲಿ ನಡೆದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾ.ಮೈಕಲ್ ಡಿ ಕುನ್ನಾ ಅವರ ನೇತೃತ್ವದಲ್ಲಿ ರಚಿಸಿದ್ದ ಆಯೋಗವು ಅಂದಿನ ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ತನಿಖೆ ನಡೆಸಲು ಶಿಫಾರಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ ಎನ್ನಲಾಗಿದೆ.
“ಏಪ್ರಿಲ್ 2020ರ ಕೋವಿಡ್ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಅವರು ಚೀನಾದ ಎರಡು ಕಂಪನಿಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ನೇರವಾಗಿ ಖರೀದಿಸಲು ಆದೇಶಿಸಿದ್ದರು. ಈ ಪ್ರಕ್ರಿಯೆಯಲ್ಲಿ ಆರೋಗ್ಯ ಸಚಿವರಾಗಿದ್ದ ಬಿ. ಶ್ರೀರಾಮುಲು ಕೂಡ ಭಾಗಿಯಾಗಿದ್ದರು. ಸಂಗ್ರಹಣೆ ನಿಯಮದ ಮೂಲ ಕಾರ್ಯವಿಧಾನವನ್ನು ಅನುಸರಿಸದೆ ನೇರವಾಗಿ ಪಿಪಿಇ ಕಿಟ್‌ಗಳ ಸಂಗ್ರಹಣೆ ಮಾಡಲಾಗಿದೆ. ಪಿಪಿಇ ಕಿಟ್ ಖರೀದಿಯ ಇಡೀ ಪ್ರಕ್ರಿಯೆಯು ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರ ಆಪ್ತ ಪೂರೈಕೆದಾರರಿಗೆ ಅನುಕೂಲ ಮತ್ತು ಲಾಭ ಮಾಡಿಕೊಡುವ ರೀತಿಯಲ್ಲಿ ನಡೆದಿದೆ. ಈ ತಪ್ಪಿತಸ್ಥರ ವಿರುದ್ಧ 1988ರ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ವಿಶ್ವಾಸಾರ್ಹತೆ ಉಲ್ಲಂಘನೆ ಅಪರಾಧದ ಅನ್ವಯ ಸೆಕ್ಷನ್ 7 ಮತ್ತು 11ರ ಅಡಿ ತನಿಖೆ ನಡೆಸುವಂತೆ ಆಯೋಗವು ಶಿಫಾರಸು ಮಾಡಿದೆ ” ಎಂದು ನ್ಯಾ. ಜಾನ್ ಮೈಕಲ್ ಕುನ್ಹಾ ಆಯೋಗ ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.
ಕೋವಿಡ್ ಸಾಂಕ್ರಾಮಿಕವು ರಾಜ್ಯವನ್ನು ಕಾಡಿದಾಗ, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಈ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ವರದಿ ನೀಡಿತ್ತು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ 2023ರ ಆಗಸ್ಟ್ 25ರಂದು ಜಾನ್ ಮೈಕೆಲ್ ಡಿಕುನ್ಹಾ ಏಕ ಸದಸ್ಯ ಆಯೋಗವನ್ನು ರಚಿಸಿತ್ತು. ಈ ಆಯೋಗ ಇದೇ ಆಗಸ್ಟ್ 31ರಂದು ಮಧ್ಯಂತರ ವರದಿ ಸಲ್ಲಿಸಿತ್ತು. ಸದ್ಯ ಉಪಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರದಿಂದ ಮುಂದಿನ ಪ್ರಕ್ರಿಯೆಯ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ.