ಬೆಂಗಳೂರು: ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿ ಧರ್ಮ ನಿಂದನೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಲೈವ್‌ನಲ್ಲಿ ಸಚಿವ ಝಮೀರ್ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, “ಕುಮಾರಸ್ವಾಮಿ ಅವರಿಗೆ ಮತ್ತೊಮ್ಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ” ಎಂದು ಜೀವ ಬೆದರಿಕೆ ಒಡ್ಡಿದ್ದ. ಈ ಸಂಬಂಧ ಸಚಿವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ಅವರು ಚಾಮರಾಜಪೇಟೆ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿನ ಮೇರೆಗೆ ಪೊಲೀಸರು ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಿದ್ದರು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.