ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದ ತನಿಖೆ ನಡೆಸಲು ರಾಜ್ಯಪಾಲರು ನೀಡಿದ್ದ ಆದೇಶಕ್ಕೆ ಅಸ್ತು ಎಂದಿದ್ದ ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ಇದೇ 23ಕ್ಕೆ ವಿಚಾರಣೆಗೆ ನಿಗದಿಪಡಿಸಿದೆ.
ಗುರುವಾರ ಬೆಳಿಗ್ಗೆ ವೀಡಿಯೊ ಕಾನ್ಸರೆನ್ಸ್ ಮುಖಾಂತರ ಹಾಜರಾಗಿದ್ದ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಫ್ಟಿ ಅವರು ರಿಟ್ ಮೇಲ್ಮನವಿಯನ್ನು ಶುಕ್ರವಾರ ಅಥವಾ ಶನಿವಾರ ವಿಚಾರಣೆಗೆ ಪರಿಗಣಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠಕ್ಕೆ ಮನವಿ ಮಾಡಿದರು.
ಆಗ ಪೀಠವು ನಾಳೆ ಸಾಧ್ಯವಿಲ್ಲ ಎಂದು ಮೇಲ್ಮನವಿ ವಿಚಾರಣೆಯನ್ನು ಇದೇ 23ಕ್ಕೆ ನಿಗದಿಗೊಳಿಸಿ ನ್ಯಾಯಪೀಠ ಆದೇಶಿಸಿತು.