Thursday, April 10, 2025

ಭೋವಿ ಅಭಿವೃದ್ಧಿ ನಿಗಮದ ಹಗರಣ: ವಕೀಲೆ ಆತ್ಮಹತ್ಯೆ ಪ್ರಕರಣದ ವಿವರ ಒದಗಿಸಲು ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

by eesamachara
0 comment

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದಲ್ಲಿ ಪೊಲೀಸ್​ ತನಿಖೆ ಎದುರಿಸಿದ್ದ ಆರೋಪಿ, ವಕೀಲೆ ಎಸ್.ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖಾ ಪ್ರಗತಿಯ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ತಮ್ಮ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಎಸ್.ಜೀವಾ 2023ರ ಆಗಸ್ಟ್​ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 2024ರ ನವೆಂಬರ್​​ 11ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜೀವಾ ಅವರು ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಸಿಐಡಿ ತನಿಖಾಧಿಕಾರಿಗಳ ಮುಂದೆ ನ.14ರಂದು ಹಾಜರಾಗಿ ತನಿಖೆಗೆ ಸಹಕಾರ ನೀಡಬೇಕು. ವಿಚಾರಣಾ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಿ, ವರದಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

ಏತನ್ಮಧೆ, ನವೆಂಬರ್ 22ರಂದು ಮುಂಜಾನೆ ಜೀವಾ ಅವರು ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಯನ್ನು ಖಂಡಿಸಿರುವ ಬೆಂಗಳೂರು ವಕೀಲರ ಸಂಘವು ಜೀವಾ ಅರ್ಜಿಗೆ ಮಧ್ಯಂತರ ಅರ್ಜಿ ಸಲ್ಲಿಸಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕೋರಿತ್ತು.

ಈ ಮಧ್ಯಂತರ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಪ್ರಕರಣ ಕುರಿತ ತನಿಖೆಯ ಸಮಗ್ರ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್.ಜಗದೀಶ್ ಅವರಿಗೆ ಸೂಚಿಸಿ, ವಿಚಾರಣೆಯನ್ನು ಬುಧವಾರಕ್ಕೆ (ನ.27) ಮುಂದೂಡಿತು.

ಇದಕ್ಕೂ ಮುನ್ನ ಬೆಂಗಳೂರು ವಕೀಲರ ಸಂಘದ ಪರ ಅದರ ಅಧ್ಯಕ್ಷರೇ ಆದ ಹಿರಿಯ ವಕೀಲ ವಿವೇಕ್ ಎಸ್.ಸುಬ್ಬಾರೆಡ್ಡಿ ನ್ಯಾಯಪೀಠದ ಮುಂದೆ ಹಾಜರಾಗಿ, ”ಪೊಲೀಸರ ಕಿರುಕುಳ ತಾಳಲಾರದೇ ವಕೀಲೆ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಶರಣಾಗುವ ಮುನ್ನ ಜೀವಾ 11 ಪುಟಗಳ ಡೆತ್‌ನೋಟ್ ಬರೆದಿದ್ದಾರೆ. ಸಿಐಡಿ ತನಿಖಾಧಿಕಾರಿಯು ಜೀವಾ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು” ಎಂದು ಕೋರಿದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios