Saturday, July 5, 2025

ಮುಡಾ ಪ್ರಕರಣದಲ್ಲಿ ಸಾಕ್ಷ್ಯಾಧಾರ ಕೊರತೆ: ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್‌ಚಿಟ್

by eesamachara
0 comments

ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್ ದೊರೆತಿದೆ. ಹಗರಣದಲ್ಲಿ ಸಿಎಂ ಪಾತ್ರವಿರುವ ಬಗ್ಗೆ ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.

ಸಿದ್ದರಾಮಯ್ಯ, ಅವರ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಕೇಳಿಬಂದ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲ. ಹೀಗಾಗಿ, ವರದಿಯನ್ನು ಕೋರ್ಟ್​ಗೆ ಸಲ್ಲಿಸಲಾಗುತ್ತಿದೆ. ಮುಡಾದಿಂದ 2016ನೇ ಸಾಲಿನಿಂದ 2024ರ ವರೆಗೆ ಶೇ.50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಸಿಆರ್​ಪಿಸಿ ಕಲಂ 173ನಡಿ ಹೆಚ್ಚುವರಿ ಅಂತಿಮ ವರದಿಯನ್ನ ಕೋರ್ಟ್​ಗೆ ಸಲ್ಲಿಸಲಾಗುವುದು ಎಂದು ತನಿಖಾಧಿಕಾರಿಗಳು ಬುಧವಾರ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೀಡಿರುವ ನೋಟಿಸ್‍ನಲ್ಲಿ ಪ್ರಸ್ತಾಪಿಸಿದ್ದಾರೆ.

ದೂರುದಾರಗೆ ಲೋಕಾಯುಕ್ತ ನೋಟಿಸ್: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದಲ್ಲಿ ಹಿನ್ನಡೆಯಾಗಿದೆ. ಬಹುತೇಕ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತರು ದೂರುದಾರರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣವು ಸಿವಿಲ್ ಸ್ವರೂಪದ್ದಾಗಿದ್ದು, ತನಿಖೆ ನಡೆಸಲು ತಕ್ಕುದಲ್ಲ. ಕಾನೂನಿನ ತಪ್ಪು ತಿಳಿವಳಿಕೆ, ಕ್ರಮ ಜರುಗಿಸಲು ಸರಿಯಾದದ್ದು ಅಲ್ಲ. ಪ್ರಮುಖವಾಗಿ ಸಾಕ್ಷ್ಯಾಧಾರಗಳ ಕೊರತೆ ಕಂಡುಬಂದಿದೆ. ಇದರಂತೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ವರದಿ ಬಗ್ಗೆ ಆಕ್ಷೇಪಣೆಗಳಿದ್ದರೆ ಒಂದು ವಾರದೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಬಹುದು ಎಂದು ಅಧಿಕಾರಿಗಳು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದಾರೆ.

ಪ್ರಕರಣದ ಹಿನ್ನೆಲೆಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 2024ರ ಆಗಸ್ಟ್‌ 8ರಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾವ ಮೈದುನ ಮಲ್ಲಿಕಾರ್ಜುನ ಸ್ವಾಮಿ, ಜೆ ದೇವರಾಜು ಹಾಗೂ ಇತರೆ ಹೆಸರಿನಡಿ ಐವರನ್ನು ಆರೋಪಿಗಳನ್ನಾಗಿಸಲಾಗಿತ್ತು.

ಇದರ ಬೆನ್ನಿಗೇ ರಾಜ್ಯಪಾಲರು ಸಿದ್ದರಾಮಯ್ಯ ಮತ್ತು ಇತರೆ ಆರೋಪಿಗಳ ತನಿಖೆಗೆ ಅನುಮತಿಸಿದ್ದರು. ಇದನ್ನು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ರಾಜ್ಯಪಾಲರ ನಿರ್ಣಯ ಹೈಕೋರ್ಟ್‌ ಎತ್ತಿ ಹಿಡಿಯುತ್ತಿದ್ದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಇದರ ಅನ್ವಯ 2024ರ ಸೆಪ್ಟೆಂಬರ್‌ 27ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

You may also like

Leave a Comment

ಸಾಮಾಜಿಕ ಹೊಣೆಯನ್ನು ಅರಿತು ಅನ್ಯಾಯಅನೀತಿಅಸಮಾನತೆಗಳ ನೈಜ ಸ್ವರೂಪವನ್ನು ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸಮಾಜ-ಧರ್ಮ-ಜನರ ಮಧ್ಯೆ ಸಮನ್ವಯ ಸಾಧಿಸುವ ನಿಟ್ಟಿನಲ್ಲಿ ಸಾಮರಸ್ಯಕ್ಕೆ ಒತ್ತು ನೀಡುವ ಸತ್ಯ ಸುದ್ದಿಗಳು ಬಿತ್ತರಿಸುವುದುದ್ವೇಷ ಮತ್ತು ಸುಳ್ಳು ಸುದ್ದಿಗಳ ತಡೆಯುವಿಕೆಯೇ ನಮ್ಮ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.

@2024 – eesamachara. All Right Reserved. Developed by denebstudios