ದಿಲ್ಲಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಜೈಲು ಪಾಲಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ.
ಕಳೆದ ಅಕ್ಟೋಬರ್ 21ರಂದು ಪ್ರಜ್ವಲ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.
ಪ್ರಜ್ವಲ್ ಪರ ವಾದ ಮಂಡಿಸಿದ ಮುಕುಲ್ ರೋಹಟಗಿ ಅವರು, “ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪ್ರಜ್ವಲ್ ವಿರುದ್ಧ ಸಲ್ಲಿಕೆಯಾಗಿರುವ ಆರಂಭಿಕ ದೂರಿನಲ್ಲಿ ಐಪಿಸಿಯ ಸೆಕ್ಷನ್ 376ರ ಉಲ್ಲೇಖ ಇಲ್ಲ” ಎಂದು ಕೋರ್ಟ್‌ಗೆ ಹೇಳಿದರು.
ಬಳಿಕ ನ್ಯಾ. ದೇಲಾ ಎಂ. ತ್ರಿವೇದಿ ಹಾಗೂ ನ್ಯಾ.ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ಕರ್ನಾಟಕ ಹೈಕೋರ್ಟ್ ಜಾಮೀನು ನಿರಾಕರಿಸಿ ಅಕ್ಟೋಬರ್ 21 ರಂದು ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಪ್ರಜ್ವಲ್ ಅತ್ಯಂತ ಪ್ರಭಾವಿ ಎಂಬುದನ್ನು ಪರಿಗಣಿಸಿ ಅರ್ಜಿ ತಿರಸ್ಕರಿಸಿದೆ.
ಪ್ರಜ್ಚಲ್ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್‌ನಲ್ಲಿ ದಾಖಲಾಗಿದ್ದ 2 ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿತ್ತು. ಪ್ರಜ್ವಲ್ ವಿರುದ್ಧ ದಾಖಲಾಗಿರುವ ಅತ್ಯಾಚಾರ ಮತ್ತು ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), 2,144 ಪುಟಗಳ ಆರೋಪಪಟ್ಟಿಯನ್ನು ಆಗಸ್ಟ್‌ನಲ್ಲಿ ಸಲ್ಲಿಸಿದೆ.