ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸಬೇಕು ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
“ಬ್ಯಾಂಕಿಂಗ್ ನಿಯಂತ್ರಣ ಅಧಿನಿಯಮ ಸೆ.35 ಎ ಅಡಿಯ ವ್ಯಾಖ್ಯಾನ ಒಪ್ಪಲಾಗುವುದಿಲ್ಲ. ಸೆ.35 ಎ ವ್ಯಾಖ್ಯಾನ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಲಾಗುವುದಿಲ್ಲ. ಅನುಮತಿ ನೀಡಿದರೆ ಎಲ್ಲ ಬ್ಯಾಂಕ್ಗಳೂ ಇದನ್ನೇ ಕೇಳಬಹುದು. ಆಗ ದೆಹಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಆ್ಯಕ್ಟ್ ನಿರರ್ಥಕವಾಗಬಹುದು” ಎಂದು ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅರ್ಜಿ ತಿರಸ್ಕರಿಸಿದೆ.
ಏನಿದು ಪ್ರಕರಣ?: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಶಿವಮೊಗ್ಗದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್‌ನೋಟ್‌ನಲ್ಲಿ ಮೂವರು ಹೆಸರು ಹಾಗೂ ಬಹುಕೋಟಿ ಹಗರಣ ನಡೆದಿರುವ ಬಗ್ಗೆ ಉಲ್ಲೇಖಿಸಿದ್ದರು. ಈ ಬೆನ್ನಲ್ಲೇ ಬ್ಯಾಂಕ್‌ನಿಂದ 94 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ. ಹಣ ವರ್ಗಾವಣೆಯಾದ ಬಗ್ಗೆ ಯಾವುದೇ ಮೇಲ್, ಮೆಸೇಜ್ ಬಂದಿಲ್ಲ. ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ದಾಖಲೆ ಸೃಷ್ಟಿಸಿ ವಂಚನೆ ಎಸಗಿದ್ದಾರೆ ಎಂದು ಆರೋಪಿಸಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಬ್ಯಾಕ್‌ನ 6 ಮಂದಿ ಸಿಬ್ಬಂದಿ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.