ಕೇರಳ: ಇಂದು ವಯನಾಡ್ ಲೋಕಸಭಾ ಉಪಚುನಾವಣೆಗೆ ಮತದಾನ ಆರಂಭವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಸೇರಿ ಒಟ್ಟು 16 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.
ಚುನಾವಣೆಯ ಹಿನ್ನೆಲೆಯಲ್ಲಿ ಮತ ಕೇಂದ್ರಕ್ಕೆ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದರು. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಿಯಾಂಕಾ ಗಾಂಧಿ, “ನನ್ನ ಪ್ರೀತಿಯ ಸಹೋದರಿ, ಸಹೋದರರೇ ದಯವಿಟ್ಟು ಇಂದು ಮತ ಚಲಾಯಿಸಿ, ಇದು ನಿಮ್ಮ ದಿನವಾಗಿದೆ. ನಮ್ಮ ಸಂವಿಧಾನವು ನಿಮಗೆ ನೀಡಿದ ಮಹಾನ್ ಅಧಿಕಾರವನ್ನು ಚಲಾಯಿಸುವ ದಿನ. ನಾವು ಒಟ್ಟಾಗಿ ಉತ್ತಮ ಭವಿಷ್ಯವನ್ನು ನಿರ್ಮಿಸೋಣ” ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಸಿಪಿಐ(ಎಂ)ನ ಸತ್ಯನ್ ಮೊಕೇರಿ ಮತ್ತು ಬಿಜೆಪಿಯ ನವ್ಯಾ ಹರಿದಾಸ್ ವಿರುದ್ಧ ಕಣದಲ್ಲಿದ್ದಾರೆ. ವಯನಾಡ್ ಸ್ಥಾನವನ್ನು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನ ಭದ್ರಕೋಟೆ ಎಂದು ಪರಿಗಣಿಸಲಾಗಿದೆ.
ರಾಹುಲ್ ಗಾಂಧಿ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಬಳಿಕ ಉತ್ತರ ಪ್ರದೇಶದ ರಾಯ್‌ಬರೇಲಿ ಪ್ರದೇಶ ಉಳಿಸಿಕೊಂಡು ವಯನಾಡ್ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದ ತೆರವುಗೊಂಡ ವಯನಾಡ್ ಕ್ಷೇತ್ರಕ್ಕೆ ಇಂದು ಉಪಚುನಾವಣೆ ನಡೆಯುತ್ತಿದೆ.